ಆರೋಗ್ಯವಂತ ಮಗುವಿನಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರೀತಂ ಗೌಡ

0

ಆರೋಗ್ಯವಂತ ಮಗುವಿನಿಂದ ದೇಶದ ಅಭಿವೃದ್ಧಿ ಸಾಧ್ಯ ಹಾಗಾಗಿ ಅಪೌಷ್ಠಿಕತೆ ನಿವಾರಣೆಗೆ ಗರ್ಭಿಣಿಯರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ಶಾಸಕರಾದ ಪ್ರೀತಂ ಜೆ. ಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಸನ, ಇವರು ಏರ್ಪಡಿಸಿದ್ದ ಪೋಷಣ್ ಅಭಿಯಾನ್ ಯೋಜನೆಯಡಿ ಅಂಗನವಾಡಿ ಕಾರ್ಯ ಕರ್ತೆಯರಿಗೆ ಮೊಬೈಲ್ ಫೋನ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ಮತ್ತು ಅಪೌಷ್ಠಕತೆ ಗಂಭೀರ ವಿಚಾರ ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮಗುವಿನ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಕಾಳಜಿವಹಿಸಿ ಶ್ರಮಿಸುವಂತೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವಂತೆ ಅವರು ತಿಳಿಸಿದರು.
ಅಪೌಷ್ಠಿಕತೆಯನ್ನು ಹೋಗಲಾಡಿಸಲು ಸರ್ಕಾರ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಪ್ರತಿ ಮನೆಮನೆಗೆ ಮಾಹಿತಿ ನೀಡುವಂತೆ ಅವರು ಹೇಳಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ದೇಶಾದ್ಯಂತ ಹಾಗೂ ರಾಜ್ಯಾದ್ಯಂತ ಇರುವ ಗರ್ಭಿಣಿಯರು, ಬಾಣಂತಿಯರು ಹಾಗೂ ಆರು ವರ್ಷದವರೆಗಿನ ಮಕ್ಕಳ ಪೌಷ್ಠಿಕಾಂಶದ ಕೊರತೆಯನ್ನು ನೀಗಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಈ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ಮಾಡಬೇಕು ಎಂದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಷಣೆ ಅತ್ಯಂತ ಮುಖ್ಯವಾದದ್ದು ಆದ್ದರಿಂದ ಗರ್ಭಿಣಿಯರು ಮತ್ತು ಬಾಣಂತಿಯರನ್ನು ಜಾಗರೂಕತೆಯಿಂದ ನೋಡಿಕೊಳ್ಳಬೇಕು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಆರ್ಥಿಕ ತೊಂದರೆ ಹಾಗೂ ಅರಿವಿನ ಕೊರತೆಯಿದೆ. ಸರ್ಕಾರದಿಂದ ಉಚಿತವಾಗಿ ನೀಡುತ್ತರುವ ಪೌಷ್ಠಿಕ ಆಹಾರವನ್ನು ಬಳಸಿಕೊಳ್ಳಲು ಅರಿವು ಮೂಡಿಸಿ ಪ್ರೆರೇಪಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸುರಕ್ಷತೆ ಹಾಗೂ ಕುಟುಂಬದ ಸುರಕ್ಷತೆಗಾಗಿ ಪ್ರತಿ 15 ದಿನಕ್ಕೊಮ್ಮೆ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ತಿಳಿಸಿದರು.

ಕೋವಿಡ್ ಸೋಂಕಿನ ಕುರಿತು ಅಸಡ್ಡೆ ತೋರಿದರೆ ಸಾವು ಸಂಭವಿಸುತ್ತದೆ. ನಿರ್ಲಕ್ಷ್ಯದಿಂದಾಗಿಯೇ ಜಿಲ್ಲೆಯಲ್ಲಿ ಈವರೆಗೆ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಹಾಗಾಗಿ ತಪ್ಪದೇ ಎಲ್ಲರೂ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಆರ್. ಗಿರೀಶ್ ಅವರು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಆರು ವರ್ಷದವರೆಗಿನ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಹಾಗೂ ಗರ್ಭಿಣಿಯರ ಜವಾಬ್ದಾರಿ ಮಹತ್ತರವಾದ್ದು, ಮಕ್ಕಳ ಪೌಷ್ಠಕತೆಯ ಕುರಿತು ನಿಗಾವಹಿಸುವಂತೆ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.
ಪ್ರತಿದಿನ ಮಕ್ಕಳೊಂದಿಗೆ ಹಾಗೂ ಪೋಷಕರೊಂದಿಗೆ ಒಡನಾಟ ಇರುವುದರಿಂದ ಪ್ರತಿಯೊಬ್ಬರೂ 15 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ದಿಲೀಪ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎ.ಟಿ. ಮಲ್ಲೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ|| ವಿಜಯ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here