ಕೊರೋನ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಪಾಲಿಸಿ: ಡಾ|| ರವಿಕುಮಾರ್

0

ಕಳೆದ 7,8 ತಿಂಗಳಿಂದ ಇಡೀ ಪ್ರಪಂಚ ಕೊರೋನ ಸೋಂಕಿನಿಂದ ನರಳುತ್ತಿದ್ದು, ಈವರೆಗೂ ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಗಿಲ್ಲ. ಹಾಗಾಗಿ ಕೋವಿಡ್-19 ಸೋಂಕನ್ನು ತಡೆಗಟ್ಟಲು ಇರುವ ಏಕೈಕ ಮಾರ್ಗ ಎಂದರೆ ಕಡ್ಡಾಯವಾಗಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದಾಗಿದೆ ಎಂದು ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿಂದು ಭಾರತೀಯ ವೈದ್ಯಕೀಯ ಸಂಘದಿಂದ ಆಯೋಜಿಸಲಾಗಿದ್ದ ಕ್ಯಾಂಡಲ್ ದೀಪಗಳನ್ನು ಬೆಳಗಿಸುವ ಮೂಲಕ ಮಾಸ್ಕ್ ಧರಿಸಿ ಕೊರೋನಾ ಓಡಿಸಿ ಎಂಬ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೋಂಕು ಹರಡುವುದನ್ನು ತಡೆಗಟ್ಟಲು ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಆಗಾಗ ಕೈಗಳನ್ನು ಸಾಬೂನಿನಿಂದ ಹಾಗೂ ಸ್ಯಾನಿಟೈಸರ್‍ನಿಂದ ಸ್ವಚ್ಛಗೊಳಿಸುವುದರಿಂದ ಕೋವಿಡ್-19 ಸೋಂಕನ್ನು ತಡೆಗಟ್ಟುವಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂದರು.
ಈ ಕ್ರಮಗಳನ್ನು ಅನುಸರಿಸುವುದರ ಜೊತೆಗೆ ಉತ್ತಮ ಪೌಷ್ಟಿಕ ಆಹಾರವನ್ನು ಸೇವಿಸುವುದರಿಂದ ರೊಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರಲ್ಲದೆ, ಕೊರೋನ ತಡೆಗಟ್ಟುವುದು ಸಾಮಾಜಿಕ ಜವಾಬ್ದಾರಿ ಎಂದು ಭಾವಿಸಿ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು.
ಕೊರೋನ ನಿವಾರಣೆಗೆ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ವೈದ್ಯರು, ಕೊರೋನ ಸೈನಿಕರು ಹಾಗೂ ಇತರೆ ಎಲ್ಲ ಸಿಬ್ಬಂದಿಗಳ ಪರಿಶ್ರಮ ಶ್ಲಾಘನೀಯವಾದದ್ದು, ಅವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ ಎಂದು ಡಾ|| ರವಿಕುಮಾರ್ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ|| ಎನ್.ರಮೇಶ್ ಅವರು ಮಾತನಾಡಿ ಕೊರೋನ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗಳಿಗೆ ಆತ್ಮಸ್ಥೈರ್ಯವನ್ನು ತುಂಬುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಈ ಮೂಲಕ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here