ಕೋವಿಡ್ ಎರಡನೇ ಅಲೆ: ಎರಡು ವಾರ ಸಭೆ, ಸಮಾರಂಭ ಬಂದ್

0

ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವುದಕ್ಕಾಗಿ ಡಿಸೆಂಬರ್ 20ರಿಂದ ಜನವರಿ 2ರವರೆಗೆ ರಾಜ್ಯದಾದ್ಯಂತ ಎಲ್ಲ ರೀತಿಯ ಸಭೆ, ಸಮಾರಂಭಗಳಿಗೆ ನಿಷೇಧ ಹೇರುವಂತೆ ರಾಜ್ಯ ಮಟ್ಟದ ಕೋವಿಡ್ ನಿಯಂತ್ರಣ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶುಕ್ರವಾರ ವಿಧಾನಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಹೊಸ ವರ್ಷಾಚರಣೆ ಸೇರಿದಂತೆ ಎಲ್ಲ ಬಗೆಯ ಸಭೆ, ಸಮಾರಂಭ ನಿಷೇಧಕ್ಕೆ ಸಲಹಾ ಸಮಿತಿ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಜನವರಿ ಅಂತ್ಯದಿಂದ ಫೆಬ್ರುವರಿಯ ಅವಧಿಯಲ್ಲಿ ಕೋವಿಡ್ ಎರಡನೇ ಅಲೆ ಬರುವ ಸಾಧ್ಯತೆ ಇದೆ ಎಂದು ಸಲಹಾ ಸಮಿತಿ ಅಂದಾಜು ಮಾಡಿದೆ. ಅದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಪೂರಕ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನರು ಗುಂಪು ಸೇರಿದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮದುವೆಗಳಿಗೆ ತಲಾ 100 ಜನರು, ಧಾರ್ಮಿಕ ಮತ್ತು ರಾಜಕೀಯ ಸಭೆ, ಸಮಾರಂಭಗಳಿಗೆ 200 ಜನ ಮತ್ತು ಅಂತ್ಯಕ್ರಿಯೆಗಳಲ್ಲಿ 50 ಜನರು ಮಾತ್ರ ಭಾಗವಹಿಸಲು ಅವಕಾಶ ನೀಡುವಂತೆ ಸಮಿತಿ ಶಿಫಾರಸು ಮಾಡಿದೆ. ಈ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪದವಿಪೂರ್ವ ಕಾಲೇಜು ಮತ್ತು ಶಾಲೆಗಳ ಆರಂಭದ ಕುರಿತು ಡಿಸೆಂಬರ್ ಕೊನೆಯ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಆರೋಗ್ಯ, ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿ ನೇತೃತ್ವದಲ್ಲಿ ಈ ಸಂಬಂಧ ಸಭೆ ನಡೆಸಲಾಗುವುದು ಎಂದರು.

‘ಗ್ರಾಮ ಪಂಚಾಯತಿ ಚುನಾವಣೆ ನಡೆಸದಂತೆ ಮನವಿ ಮಾಡಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೆ. ಆದರೆ ಆಯೋಗ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಪಂಚಾಯತಿ ಚುನಾವಣೆ ಮನೆ ಮನೆಗೂ ವೈರಸ್ ಹಂಚಲು ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಜನರು ಹೆಚ್ಚು ಜಾಗ್ರತೆ ವಹಿಸಬೇಕ’ ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here