ಕೋವಿಡ್-19 ಕುರಿತು ಅರಿವು ಮೂಡಿಸಲು ಕ್ರಮ ವಹಿಸಿ: ಆರ್. ಗಿರೀಶ್

0

ಹಾಸನ ಜಿಲ್ಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರ ಸಹಾಯದೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ, ಮಾಸ್ಕ್ ಧರಿಸುವ ಬಗ್ಗೆ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಕೋವಿಡ್-19 ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿನ 20 ಸಾವಿರ ಧರ್ಮಸ್ಥಳ ಸಂಘಗಳಲ್ಲಿ 1.36 ಲಕ್ಷ ಜನರಿದ್ದು, ಅವರೆಲ್ಲರಿಗೂ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ತಾಲ್ಲೂಕು ಮಟ್ಟದಲ್ಲಿ ಧರ್ಮಸ್ಥಳ ಸಂಘದ ವ್ಯವಸ್ಥಾಪಕರೊಂದಿಗೆ ಪರಿಣಾಮಕಾರಿ ಕ್ರಿಯಾ ಯೋಜನೆ ರೂಪಿಸಿ, ತಾಲ್ಲೂಕಿನಲ್ಲಿರುವ ಹಾಟ್‍ಸ್ಪಾಟ್‍ಗಳಲ್ಲಿ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅರಿವು ಮೂಡಿಸುವಂತೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಗ್ರಾಮಾಂತರ ಪ್ರದೇಶಗಳ ಪ್ರತಿ ಮನೆ ಮನೆಗೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನೊಳಗೊಂಡ ಕರಪತ್ರಗಳನ್ನು ಹಂಚಿಕೆ ಮಾಡುವಂತೆ ಸೂಚಿಸಿದರಲ್ಲದೆ, ಗುರಿ ನೀಡಿರುವಷ್ಟು ರ್ಯಾಟ್ ಪರೀಕ್ಷೆ ಮಾಡಿ, ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ರ್ಯಾಟ್ ಹಾಗೂ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನಡೆಸಲು ಧರ್ಮಸ್ಥಳ ಸಂಘದ ಕಾರ್ಯಕರ್ತರನ್ನು ಬಳಸಿಕೊಳ್ಳುವಂತೆ ಹಾಗೂ ಪ್ರತಿ ದಿನದ ನಿರ್ಧಿಷ್ಟ ಗುರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಆರ್. ಗಿರೀಶ್ ಅವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಸಮುದಾಯ ಆರೋಗ್ಯ ಕೇಂದ್ರಗಳಿಗೆ ಬರುವ ಹೊರ ರೋಗಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿನಕ್ಕೆ 10 ರಿಂದ 15 ಗುರಿ ನಿಗಧಿ ಪಡಿಸಿ ಕೋವಿಡ್ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರ ಮನೆಗೆ ಪ್ರತಿ ದಿನ ಬೇಟಿ ನೀಡಿ ಆರೋಗ್ಯ ವಿಚಾರಿಸುವಂತೆ ಹಾಗೂ ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರ ಸಾವನ್ನಪ್ಪದಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ತಹಶೀಲ್ದಾರರಿಗೆ ಆರ್. ಗಿರೀಶ್ ಅವರು ನಿರ್ದೇಶಿಸಿದರು.
ಗಂಟಲ ದ್ರವ ಸಂಗ್ರಹಕ್ಕೆ 58 ಸಿಬ್ಬಂದಿಗಳನ್ನು ನೇಮಿಸಿದ್ದು, ಅವರನ್ನು ಎಲ್ಲಾ ತಾಲ್ಲೂಕುಗಳಿಗೂ ನೀಡಲಾಗುತ್ತದೆ. ಅವರನ್ನು ಬಳಸಿಕೊಂಡು ಕೋವಿಡ್ ಪರೀಕ್ಷೆ ಹೆಚ್ಚಿಸಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿಯವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಮಾತನಾಡಿ ಖಾಸಗಿ ಆಸ್ಪತ್ರೆಗಳಿಗೆ ಬರುವ ಹೊರ ರೋಗಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ತಹಶೀಲ್ದಾರ್ ಶಿವಶಂಕರಪ್ಪ, ಧರ್ಮಸ್ಥಳ ಸಂಘದ ಜಿಲ್ಲಾ ವ್ಯವಸ್ಥಾಪಕರಾದ ಜಯರಾಮ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here