ತಂಬಾಕು ನಿಷೇಧ ಕಾಯ್ದೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಸೂಚನೆ

0

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು, ತಂಬಾಕು ನಿಷೇಧ ಕಾಯ್ದೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಎ ಪರಮೇಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿ ಅವರು ಶಾಲಾ-ಕಾಲೇಜುಗಳ ಆವರಣದಿಂದ 100 ಮೀಟರ್ ವ್ಯಾಪ್ತಿಯೊಳಗೆ ಧೂಮಪಾನ ನಿಷೇಧ ಬಗ್ಗೆ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು ಎಂದರು.

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುವ ಯಾವುದೇ ವ್ಯಕ್ತಿಗೆ ಪ್ರತಿ ಉಲ್ಲಂಘನೆಗೆ 200 ರೂ ದಂಡ ವಿಧಿಸಬಹುದಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದರು.

ಸಿಗರೇಟು ಹಾಗೂ ಬೀಡಿ ಪ್ಯಾಕ್ ಗಳ ಮೇಲೆ ನಿರ್ದಿಷ್ಟ ಆರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವವರ ಮೇಲೆ ಕ್ರಮವಹಿಸುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಸರ್ಕಾರಿ ಕಚೇರಿ ಎಂದು ನಾಮಫಲಕವನ್ನು ಅಳವಡಿಸಬೇಕು ಎಂದು ಸಿ. ಇ. ಓ ಸೂಚಿಸಿದ್ದಾರೆ.

ತಂಬಾಕು ನಿಷೇಧ ಕಾಯ್ದೆಯಡಿ ಅಗಂಡಿಗಳ ಮೇಲೆ ಅನಿರೀಕ್ಷಿತ ದಾಳಿ ಮಾಡಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದ್ದು, 100 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ ಎಂದು ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ| ಈರಣ್ಣಯ್ಯ, ವಿವಿಧ ವೈದ್ಯರು ಮತ್ತು ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here