ಪಾಸಿಟಿವ್ ದರ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮವಹಿಸಿ: ಸಚಿವ ಕೆ. ಸುಧಾಕರ್

0

ಎಲ್ಲಾ ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾಸಿಟಿವ್ ದರ ಕಡಿಮೆ ಮಾಡಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಕೆ. ಸುಧಾಕರ್ ಅವರು ನಿರ್ದೇಶಿಸಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಬೂತ್ ಮಟ್ಟದ ಸಮಿತಿ, ವಾರ್ಡ್ ಮಟ್ಟದ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಮೂಲಕ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶಿತ ಜ್ವರದಿಂದ ಬಳಲುತ್ತಿರುವಂತಹ ಪ್ರಕರಣಗಳು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರ ಬಗ್ಗೆ ಪೂರ್ಣ ಮಾಹಿತಿ ಪಡೆದು ಕೋವಿಡ್-19 ಪರೀಕ್ಷೆಗೆ ಒಳಪಡಿಸುವಂತೆ ಅವರು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿ ಬರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ಐ.ಎಲ್.ಐ., ಸಾರಿ, ಗರ್ಭಿಣಿಯರು, ಡಯಾಬಿಟಿಸ್ ಹಾಗೂ ಕೋವಿಡ್-19 ರೋಗ ಲಕ್ಷಣಗಳಿರುವವರ ಪ್ರತಿ ಮನೆ ಮನೆ ಸಮೀಕ್ಷೆ ಮಾಡಿ ಪರೀಕ್ಷೆಗೆ ಒಳಪಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗಳಲ್ಲಿ ಗುರುತಿಸಿರುವ ಹಾಟ್‍ಸ್ಪಾಟ್‍ಗಳು ಹಾಗೂ ಕಂಟೈನ್ಮೆಂಟ್ ವಲಯಗಳಲ್ಲಿನ ಎಲ್ಲಾ ಜನರನ್ನು ಪರೀಕ್ಷೆಗೆ ಒಳಪಡಿಸಿ ಕೋವಿಡ್-19 ಹರಡದಂತೆ ನಿಗಾ ವಹಿಸುವಂತೆ ಸೂಚಿಸಿದರಲ್ಲದೆ, ಸೋಂಕಿತರು ಹೆಚ್ಚಾಗಿರುವ ತಾಲ್ಲೂಕುಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.

ಕೆಲವು ಜನರ ನಿರ್ಲಕ್ಷ್ಯದಿಂದ ಅಮಾಯಕ ಜನರ ಬಲಿಯಾಗುತ್ತಿದ್ದು, ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ಆಸ್ಪತ್ರೆಗಳಲ್ಲಿ ಔಷದೋಪಚಾರಗಳ ಕೊರತೆಯಾಗದಂತೆ ಕ್ರಮವಹಿಸುವಂತೆ ಸಚಿವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
ಪ್ರತಿಯೊಬ್ಬ ಅಧಿಕಾರಿಯೂ ನಿರ್ಲಕ್ಷ ತೋರದೆ ಕೋವಿಡ್ ಪರೀಕ್ಷೆ ನಡೆಸುವುದು, ಸೋಂಕಿತರ ಪತ್ತೆ ಕಾರ್ಯ, ಮಾಸ್ಕ್ ಧರಿಸುವು, ಸಾಮಾಜಿಕ ಅಂತರ ಕಾಪಾಡುವುದು ಇಂತಹ ಅಂಶಗಳು ಹಾಗೂ ಪ್ರತಿಯೊಂದು ವಿಷಯದಲ್ಲಿ ಜವಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಕೋವಿಡ್-19 ಸೋಂಕಿನಿಂದ ಸಾವಿನ ಸಂಖ್ಯೆ ಹೆಚ್ಚಾಗದಂತೆ ಎಚ್ಚೆತ್ತುಕೊಂಡು ಚಿಕಿತ್ಸೆ ನೀಡುವಂತೆ ಹಾಗೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಕುರಿತು ಪ್ರತಿ ದಿನ ವರದಿ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಐ.ಎಲ್.ಐ. ಪ್ರಕರಣಗಳು ಹಾಗೂ ರೋಗಲಕ್ಷಣಗಳಿರುವವರು ದಾಖಲಾಗಿದ್ದರೆ ಅಂತಹವರ ಮಾಹಿತಿ ಪಡೆದು ಕೋವಿಡ್-19 ಪರೀಕ್ಷೆಗೆ ಒಳಪಡಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸೋಂಕಿತರಿಗೆ ಕೋವಿಡ್-19 ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಹಣಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದಲ್ಲಿ ಅಂತಹ ಆಸ್ಪತ್ರೆಗಳಿಗೆ ದಂಡ ವಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವರಾದ ಕೆ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೆ ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧ ಹೆಚ್ಚಾಗಿ ದಂಡ ವಿಧಿಸುವಂತೆ ಹಾಗೂ ಜಿಲ್ಲೆಯಲ್ಲಿನ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿನಕ್ಕೆ 100 ಪ್ರಕರಣ ದಾಖಲಿಸುವಂತೆ ಗುರಿ ನೀಡಲು ಸಚಿವರಾದ ಕೆ. ಸುಧಾಕರ್ ಅವರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಮೂಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರು ಮಾತನಾಡಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಗುರುತಿಸಿರುವ ಎಲ್ಲಾ ಹಾಟ್‍ಸ್ಪಾಟ್ ವಲಯಗಳಲ್ಲಿನ ಎಲ್ಲಾ ಜನರನ್ನು ಆರ್.ಟಿ.ಪಿ.ಸಿ.ಆರ್ ಹಾಗೂ ರ್ಯಾಟ್ ಪರೀಕೆಗೆ ಒಳಪಡಿಸುವಂತೆ ಹಾಗೂ ಪ್ರತಿ ಜಿಲ್ಲೆಯಲ್ಲಿ ಗರೀಷ್ಠ ಪ್ರಮಾಣದ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯಕೀಯ ಶಿಕ್ಷಣ ಪ್ರಧಾನ ಕಾರ್ಯದರ್ಶೀ ಅನಿಲ್ ಕುಮಾರ್ ಅವರು ಮಾತನಾಡಿ ಹೋಂ ಐಸೋಲೇಷನ್ ನಲ್ಲಿರುವವರಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ ಎಂದು ಸೂಚಿಸಿದರಲ್ಲದೆ, ಒಬ್ಬ ಸೋಂಕಿತರಿಗೆ 10 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಸರ್ಕಾರದ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ದಂಡ ವಿಧಿಸುತ್ತಿರುವುದರ ಕುರಿತು ಸಚಿವರಿಗೆ ಸಂಪೂರ್ಣ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ಆಯುಷ್ ಅಧಿಕಾರಿ ವೀಣಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಹಿರಣ್ಣಯ್ಯ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here