ವಸತಿಹೀನರಿಗೆ ನಿವೇಶನಕ್ಕೆ ಶೀಘ್ರ ಸ್ಥಳ ಗುರುತಿಸಿ: ಆರ್. ಗಿರೀಶ್

0

ಹಾಸನ ಗ್ರಾಮಾಂತರ ಪ್ರದೇಶಗಳಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದ ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಒದಗಿಸಲು ಆಯಾ ತಾಲ್ಲೂಕುಗಳಲ್ಲಿ ಆದಷ್ಟು ಬೇಗ ಸ್ಥಳವನ್ನು ಗುರುತಿಸಿ ಮಂಜೂರಾತಿಗೆ ಅನುಮೋದನೆ ಕಳುಹಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಎಲ್ಲಾ ತಾಲ್ಲೂಕು ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಈವರೆಗೆ ಎಷ್ಟು ನಿವೇಶನಗಳನ್ನು ನೀಡಲಾಗಿದೆ ಎಂದು ತಾಲ್ಲೂಕುವಾರು ವರದಿ ಪಡೆದು, ಅರ್ಹರಿಗೆ ನಿವೇಶನ ನೀಡಲು ತಡವಾಗಬಾರದು, ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದರು.
ಪರಿಹಾರ ಪೋರ್ಟಲ್‍ನಲ್ಲಿ ಬೆಳೆಹಾನಿ ಕುರಿತ ಮಾಹಿತಿಯನ್ನು ಸರಿಯಾಗಿ ಪರಿಶೀಲನೆ ನಡೆಸಿ ನಂತರ ನಮೂದಿಸಿ. ಕಾಫಿ ಬೆಳೆ ಸೇರಿದಂತೆ ಇತರೆ ಬೆಳೆ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದೆ ಎಂದು ಆಯಾ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಂಬಧಪಟ್ಟ ಅಧಿಕಾರಿಗಳು ಸೂಕ್ತ ಮಾಹಿತಿ ಕಲೆ ಹಾಕಿ ನಿಖರ ವರದಿ ನೀಡಿ ಎಂದು ಅವರು ಹೇಳಿದರು.
ಈ ಬಾರಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರವನ್ನು ಆದಷ್ಟು ಬೇಗ ಒದಗಿಸಬೇಕು ಎಂದರಲ್ಲದೆ, ಅಧಿಕೃತ ಮನೆಗಳಿಗೆ ಮಾತ್ರ ದೃಢೀಕರಣ ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ 10,000 ರೂ. ಗಳ ಸಾಲಸೌಲಭ್ಯ ನೀಡಲಾಗುತ್ತಿದ್ದು, ನೊಂದಾಯಿತ ವ್ಯಾಪಾರಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಆಯಾ ತಾಲ್ಲೂಕಿನ ಮುಖ್ಯ ಅಧಿಕಾರಿಗಳು ಕ್ರಮವಹಿಸಿ ಎಂದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್ ಹಾಗೂ ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here