ಕೋವಿಡ್ ಸಾವಿನ ಸಂಖ್ಯೆ ಇಳಿಕೆಗೆ ಕಟ್ಟುನಿಟ್ಟಿನ ಕ್ರಮವಹಿಸಿ:ನವೀನ್ ರಾಜ್ ಸಿಂಗ್

0

ಹಾಸನ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವುದರ ಜೊತೆಗೆ ಸಾವಿನ ಸಂಖ್ಯೆ ಇಳಿಕೆಗೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಮೈಸೂರು ಮಿನರಲ್ಸ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಐ.ಇ.ಸಿ. ಚಟುವಟಿಕೆಗಳ ಮೂಲಕ ಕೋವಿಡ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಎಂದರಲ್ಲದೆ, ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಿ ಎಂದು ತಿಳಿಸಿದರು.

ಕೋವಿಡ್ ಶಂಕಿತ ವಯೋವೃದ್ದರನ್ನು ಪ್ರತ್ಯೇಕ ಕೋಠಡಿಯಲ್ಲಿರಿಸುವುದರ ಜೊತೆಗೆ ಅವರ ಆರೋಗ್ಯ ಹಿನ್ನಲೆಗಳ ಕುರಿತು ಪರಿಶೀಲಿಸಿ ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಸಾರ್ವಜನಿಕರಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಅರಿವು ಮೂಡಿಸಲು ಬ್ಯಾನರ್ ಬರೆಸಿ ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಹಾಕಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಜೊತೆಗೆ ಶೀಘ್ರವಾಗಿ ಫಲಿತಾಂಶ ನೀಡುವಂತಹ ಟಿ.ಬಿ. ಪರೀಕ್ಷೆಗೆ ಬಳಸುವ ಟ್ರೂನಾಟ್ ಮಷಿನ್ ಅನ್ನು ಅತೀ ತುರ್ತು ಪ್ರಕರಣ ಮತ್ತು ವಯೋವೃದ್ಧರನ್ನು ಪರೀಕ್ಷಿಸಲು ಬಳಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಹೋಂ ಐಸೋಲೇಷನ್ ನಲ್ಲಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಿ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾ ಉಸ್ತವಾರಿ ಕಾರ್ಯದರ್ಶಿಯವರಿಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಮಾತನಾಡಿ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶಗಳಲ್ಲಿ ಕರ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕರಿಂದ ಜಿಲ್ಲೆಯ ಮಳೆ ಮತ್ತು ಬೆಳೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮವಹಿಸಲು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ಜಂಟಿ ಕೃಷಿ ನಿರ್ದೇಶಕರಾದ ರವಿ, ಕೋವಿಡ್ ನೋಡಲ್ ಅಧಿಕಾರಿ ಡಾ|| ಅನುಪಮ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here