ಕೋವಿಡ್-19 ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೋವಿಡ್-19 ಜನಾಂದೋಲನ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಣ್ಣ ಅವರು ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಹಾಸನ ಇವರ ವತಿಯಿಂದ ನಗರದಲ್ಲಿ ಚನ್ನಪಟ್ಟಣ ಬಡಾವಣೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿಂದು ಏರ್ಪಡಿಸಿದ್ದ ಜನಾಂದೋಲನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋರೊನಾ ಹರಡದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಇತರರಿಂದ 6 ಅಡಿ ಅಂತರ ಕಾಯ್ದುಕೊಳ್ಳಲು ತಿಳಿಸಿದರು.
ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆಗಬಹುದಾದ ಅಪಾಯಗಳನ್ನು ಸದಾ ಮನಸಿನಲ್ಲಿ ಇಟ್ಟುಕೊಂಡು ಎಚ್ಚರಿಕೆಯಿಂದಿರಲು ಈ ಮಾರಣಾಂತಿಕ ವೈರಾಣು ಹರಡುವುದನ್ನು ತಡೆಯಲು ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕೋವಿಡ್‍ಗೆ ಸಂಬಂಧಿಸಿದಂತೆ ಯುಕ್ತವಾದ ವರ್ತನೆಯನ್ನು ಅನುಸರಿಸುವುದರ ಜೊತೆಗೆ ಬೇರೆಯವರು ಅದನ್ನು ಅನುಸರಿಸಲು ಉತ್ತೇಜಿಸುವ ಮೂಲಕ ಎಲ್ಲರೂ ಒಗ್ಗಟ್ಟಾಗಿ ಕೊರೋನಾವನ್ನು ಓಡಿಸೋಣ ಎಂದು ನ್ಯಾ|| ಶಿವಣ್ಣ ಅವರು ಪ್ರತಿಜ್ಞಾವಿಧಿ ಬೋಧನೆ ಮಾಡಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ತ್ವರಿತಗತಿಯಲ್ಲಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೋವಿಡ್-19 ತಡೆಗಟ್ಟಲು ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಅನುಸರಿಸಬೇಕು ಎಂದರು.
ಜಿಲ್ಲೆಯಲ್ಲಿನ ಒಟ್ಟಾರೆ ಪ್ರಕರಣಗಳಲ್ಲಿ ಶೇ. 70 ರಷ್ಟು ಪ್ರಕರಣಗಳು ರೋಗ ಲಕ್ಷಣಗಳಿಲ್ಲದೇ ಪಾಸಿಟೀವ್ ಬಂದಿದ್ದು, ಸಾರ್ವಜನಿಕರು ನಿರ್ಲಕ್ಷ್ಯ ತೋರದೆ ಮತ್ತು ತಮ್ಮ ಕುಟುಂಬದವರಿಗೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್‍ಗೌಡ ಅವರು ಮಾತನಾಡಿ ಮದುವೆ ಸಮಾರಂಭಗಳು, ವಿಜಯೋತ್ಸವ ಸಮಾರಂಭಗಳು ಹಾಗೂ ಜಾತ್ರಾ ಮಹೋತ್ಸವಗಳು ಹೆಚ್ಚಾಗಿ ನಡೆಯುತ್ತಿದ್ದು, ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ ಹಾಗಾಗಿ ಸಾರ್ವಜನಿಕರು ಎಚ್ಚರಿಕೆವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ.ಬಸವರಾಜ್, ನ್ಯಾಯಾಧೀಶರುಗಳಾದ ಎಂ.ಹೆಚ್. ಶಾಂತ, ಕೆ.ನಾರಾಯಣ ಪ್ರಸಾದ್, ರವೀಂದ್ರ ಹೆಗಡೆ, ನಾಗವೇಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಡಾ|| ಅಬ್ದುಲ್ ಬಶೀರ್ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜೆ.ಪಿ. ಶೇಖರ್, ವಕೀಲರುಗಳು ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.