ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಮೀಸಲಿರುವ ಯೋಜನೆಗಳ ಸೌಲಭ್ಯಗಳನ್ನು ನಿಗದಿತ ಕಾಲಮಿತಿಯೊಳಗೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗೆ ರೂಪಿಸಲಾಗಿರುವ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಿ ಸಭೆ ನಡೆಸಿದ ಅವರು ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸಿ ಎಂದು ತಿಳಿಸಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನೀಡಲಾಗುವ ಯಂತ್ರೋಪಕರಣ ಹಾಗೂ ಇತರೆ ಸೌಕರ್ಯಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಅನುದಾನದ ಕೊರತೆ ಇದೆ. ಈ ನಿಟ್ಟಿನಲ್ಲಿ ಹೆಚ್ಚುವರಿ ಹಣ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಪಡೆದ ರೈತರಿಗೆ ಕೃಷಿ, ತೊಟಗಾರಿಕೆ ಇಲಾಖೆಯಿಂದ ನೀಡಲಾಗುವ ಹನಿ ನೀರಾವರಿ ಸೌಕರ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರಲ್ಲದೆ, ಹಲವು ಇಲಾಖೆಗಳು ಕೊಳವೆ ಬಾವಿ ಸೌಲಭ್ಯಗಳನ್ನು ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುತಿದ್ದು, ಇಲಾಖೆಗಳು ಪರಸ್ಪರ ಸಹಯೊಗದೊಂದಿಗೆ ಹೆಚ್ಚಿನ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕಾರ್ಯ ನಿರ್ವಹಿಸಬೇಕು ಎಂದರು.
ಜನನಿ ಸುರಕ್ಷಾ ಯೋಜನೆ ಸೇರಿದಂತೆ ಹಲವು ಯೋಜನೆಗಳಿಂದ ಫಲಾನುಭವಿಗಳು ವಂಚಿತರಾಗುತ್ತಿದ್ದು, ಜಿಲ್ಲಾ ಆಸ್ಪತ್ರೆಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಆದರೆ ಈ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಲಭ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಅಗತ್ಯವಿದ್ದು, ಸೂಚನಾ ಫಲಕಗಳಲ್ಲಿ ಮಾಹಿತಿಗಳನ್ನು ಪ್ರಕಟಿಸಿ ಎಂದರು.
ಇದೇ ರೀತಿ ಗರ್ಭಿಣಿ, ಮಕ್ಕಳು, ಬಾಣಂತಿಯರಿಗೆ ನೀಡಲಾಗುವ ಪೂರಕ ಪೌಷ್ಠಿಕ ಆಹಾರ ಸಕಾಲದಲ್ಲಿ ತಲುಪಿಸಿ ಎಂದು ಜಿಲ್ಲಾಧಿಕಾರಿಯವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲ ಇಲಾಖೆಗಳಲ್ಲಿ ಅನುದಾನ ಲಭ್ಯವಿದ್ದರೂ ವೆಚ್ಚ ಮಾಡಿಲ್ಲ. ಮುಂದಿನ ಸಭೆಯೊಳಗೆ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ತೃಪ್ತಿಕರವಾಗಿರುವಂತೆ ಹೆಚ್ಚಿನ ಮುತುವರ್ಜಿ ವಹಿಸಿ ಯೊಜನೆಗಳನ್ನು ಅನುಷ್ಠಾನಗೊಳಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಜಲ್ ಜೀವನ್ ಮಿಷನ್ ಅಭಿಯಾನದಡಿಯಲ್ಲಿ ನಗರ ಸೇರಿದಂತೆ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ವ್ಯಕ್ತಿಗೂ ದಿನಕ್ಕೆ 55 ಲೀಟರ್‍ನಂತೆ ದಿನದ 24 ಗಂಟೆಯೂ ಸಹ ಅಗತ್ಯ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತದೆ. ಇದರ ಅನ್ವಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳ ಮನೆಯ ಮುಂದೆಯೂ ನಲ್ಲಿ ಅಳವಡಿಸಲಾಗುವುದು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು ಅವರು ಅರಣ್ಯ ಇಲಾಖೆಯಿಂದ ಒದಗಿಸಲಾಗುತ್ತಿರುವ ಗ್ಯಾಸ್ ಹಾಗೂ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಜಂಟಿ ಕೃಷಿ ನಿರ್ದೇಶಕರಾದ ರವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಧರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಯೋಗೇಶ್ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.