ಶ್ರವಣಬೆಳಗೊಳ: ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ರಾಕೃತ ವಿಶ್ವವಿದ್ಯಾನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಶ್ರೀ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.
ನಂತರ ಮಾತನಾಡಿದ ಅವರು, ಶ್ರೀಕ್ಷೇತ್ರ ಶ್ರವಣಬೆಳಗೊಳದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷದ ಬಜೆಟ್ನಲ್ಲಿ 20 ಕೋಟಿ ಅನುದಾನ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಭೇಟಿ ಮಾಡಿ ಅವಶ್ಯವಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ನಮ್ಮ ಜಿಲ್ಲೆಯ ಶ್ರವಣಬೆಳಗೊಳವು ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿದೆ. ಇದು ನಮ್ಮ ರಾಜ್ಯದ ಹೆಮ್ಮೆಯ ಸಂಕೇತವಾಗಿದ್ದು, ಈ ಕ್ಷೇತ್ರದ ಅಭಿವೃದ್ಧಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿನೇಂದ್ರ, ತಹಸೀಲ್ದಾರ್ ಜೆ.ಬಿ.ಮಾರುತಿಗೌಡ, ಬಾಹುಬಲಿ ಪ್ರಾಕೃತ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎ.ಸಿ.ವಿದ್ಯಾಧರ್, ಶ್ರೀಮಠದ ಆಡಳಿತ ಮಂಡಳಿ ಸದಸ್ಯ ಸುರೇಶ್ ಪಾಟೀಲ್, ಎಡಿಎಲ್ಆರ್ ಶಂಶುದ್ದೀನ್, ಲೋಕೋಪಯೋಗಿ ಇಲಾಖೆ ಅಭಿಯಂತರ ಕಾಳೇಗೌಡ, ಜೀವನ್ ಪಟೇಲ್, ಕಂದಾಯ ನಿರೀಕ್ಷಕ ಕೆ.ಪಿ.ರಮೇಶ್ ಮುಂತಾದವರಿದ್ದರು.