ಕೋವಿಡ್-19 ಸೋಂಕಿತರು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪ್ರಕರಣಗಳನ್ನು ಕಡಿಮೆ ಮಾಡಲು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಮೂರು ಪಟ್ಟು ಹೆಚ್ಚಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರು ಸಂಬಂಧಿಸಿದ ಜಿಲ್ಲೆಗಳಿಗೆ ಸೂಚಿಸಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತು ಮರಣ ಪ್ರಮಾಣ ಹೆಚ್ಚಾಗಿರುವ 7 ರಾಜ್ಯಗಳೊಂದಿಗೆ ಪ್ರಧಾನ ಮಂತ್ರಿಯವರು ವೀಡಿಯೋ ಸಂವಾದ ನಡೆಸಿ ಸೋಂಕು ತಡೆಗಟ್ಟಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಎಲ್ಲಾ ಜಿಲ್ಲೆಗಳು ಅನುಸರಿಸಬೇಕು ಎಂದರು.
ಸಾಮಾಜಿಕ ಅಂತರ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುವಂತೆ ಹಾಗೂ ಈ ಬಗ್ಗೆ ನಗರ ಪ್ರದೇಶದ ಪೋಲೀಸ್ ಸಿಬ್ಬಂಧಿಗಳಿಗೆ ಹಾಗೂ ನಗರ ಪಾಲಿಕೆ ಕಂದಾಯ ಅಧಿಕಾರಿಗಳಿಗೆ ನಿಗಧಿತ ಗುರಿ ನೀಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.
ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ 24 ಗಂಟೆಯೊಳಗೆ ಮಾಡಬೇಕು ಹಾಗೂ ಒಬ್ಬ ಸೋಂಕಿತರಿಗೆ 10 ಮಂದಿ ಸಂಪರ್ಕಿತರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸುವ ಮೂಲಕ ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಅಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಅವರು ತಿಳಿಸಿದರು.
ಐ.ಎಲ್.ಎ ಮತ್ತು ಸಾರಿ ಪ್ರಕರಣಗಳಲ್ಲಿ ಶೇ. 100 ರಷ್ಟು ಪರೀಕ್ಷೆಯಾಗಬೇಕು ಎಂದು ನಿರ್ದೇಶಿಸಿದರಲ್ಲದೆ, ಹೋಂ ಐಸೋಲೇಷನ್ ನಲ್ಲಿರುವ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರತಿ ದಿನ ವೈದ್ಯರು ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುವಂತೆ ಹಾಗೂ ಅವರೆಲ್ಲರಿಗೂ ಥರ್ಮೋ ಮೀಟರ್ ನೀಡಿ ನಿಗಾವಹಿಸುವಂತೆ ಟಿ.ಎಂ. ವಿಜಯ್ ಭಾಸ್ಕರ್ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಮೈಕ್ರೋ ಕಂಟೈನ್ಮೆಂಟ್ ವಲಯದಲ್ಲಿರುವವರನ್ನು ಕೋವಿಡ್ ಪರಿಕ್ಷೆಗೆ ಒಳಪಡಿಸಬೇಕು ಹಾಗೂ ಸೋಂಕಿತರ ಸಂಪರ್ಕಿತರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರನ್ನು ಎರೆಡೆರಡು ಬಾರಿ ಪರೀಕ್ಷೆಗೆ ಒಳಪಡಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ಪರೀಕ್ಷೆಯ ಕುರಿತು ಅಪ ಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವಿದ್ ಅಖ್ತರ್ ಅವರು ಮಾತನಾಡಿ ಎಲ್ಲಾ ಜಿಲ್ಲಾಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿಯ ಚಿಕಿತ್ಸೆ ಮತ್ತು ಔಷದೋಪಚಾರ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸಾರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಾಗದಂತೆ ಮತ್ತು ಯಾವುದೇ ರೋಗಿಗೂ ತೊಂದರೆಯಾಗದಂತೆ ನಿಗಾವಹಿಸಿ ಎಂದು ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ಜಿಲ್ಲೆಯಲ್ಲಿನ ಸೋಂಕಿತರ ಪತ್ತೆಗಾಗಿ ಸರ್ಕಾರ ನೀಡಿರುವ ಆರ್.ಟಿ.ಪಿ.ಸಿ.ಆರ್ ಹಾಗೂ ರ್ಯಾಟ್ ಪರೀಕ್ಷೆಗಳ ಗುರಿ ಸಾಧನೆ ಕುರಿತು ಹಾಗೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುತ್ತಿರುವುದರ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮೂರ್ಕಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣ ಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ||ಹಿರಣ್ಣಯ್ಯ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.