ಅಂಗನವಾಡಿ ಕಾರ್ಯಕರ್ತರ ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ನೀಡುವಂತೆ ಹಾಗೂ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಹೊಸಬರನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಂಗನವಾಡಿ ಕಾರ್ಯಕರ್ತೆಯರ ಕುಂದು ಕೊರತೆಗಳನ್ನು ಆಲಿಸಿ ಅವರಿಗೆ ಅವಶ್ಯಕವಿರುವ ಸೌಲಭ್ಯಗಳನ್ನು ಶೀಘ್ರವಾಗಿ ನೀಡುವಂತೆ ತಿಳಿಸಿದರು.
ಅಂಗನವಾಡಿ ನಿರ್ವಹಣೆಗಾಗಿ ನೀಡಲಾಗುವ ಸಾದಿಲ್ವಾರು ಮತ್ತು ಫ್ಲೆಕ್ಸಿ ಫಂಡ್ನ್ನು 15 ದಿನಗಳ ಒಳಗೆ ಅಥವಾ ಮಾಹೆಯ ಅಂತ್ಯದೊಳಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ತಲುಪಿಸುವಂತೆ ಬಿ.ಎ. ಪರಮೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿಯಲ್ಲಿ ನೀಡಲಾಗುವ ಮೊಟ್ಟೆ ಮತ್ತು ಆಹಾರ ಪದಾರ್ಥಗಳಿಗೆ ಸಂಬಂಧಿಸಿದ ಹಣವನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನೀಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿಗಳಿಗೆ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಮಾತನಾಡಿ ಎಲ್ಲಾ ತಾಲ್ಲೂಕುಗಳ ಅಂಗನವಾಡಿಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಮಾಹಿತಿ ನೀಡಿ ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಜಿ. ದಿಲೀಪ್, ಜಿಲ್ಲಾ ನಿರೂಪಣಾಧಿಕಾರಿ ಎ.ಟಿ. ಮಲ್ಲೇಶ್, ಎಲ್ಲಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.