ಜಿಲ್ಲೆಯಲ್ಲಿ ಸೆ.17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾದ ವಿಶೇಷ ಪ್ರಚಾರ ವಾಹನಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ ಸೆ.17ರಂದು ರಾಜ್ಯಾದ್ಯಂತ ಬೃಹತ್ ಕೋವಿಡ್ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಸನವು ಒಳಗೊಂಡಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದ್ದು, ಜಿಲ್ಲೆಯಲ್ಲಿ ಸುಮಾರು 80 ಸಾವಿರ ಗುರಿಯನ್ನು ಹೊಂದಲಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಈಗಾಗಲೇ 900ಕ್ಕೂ ಅಧಿಕ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದ ಜಾಗೃತಿಯ ಅಂಗವಾಗಿ ಹಾಸನದಲ್ಲಿ ಹತ್ತು ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗಿದ್ದು, ನಗರದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಲಸಿಕಾ ಮೇಳವು ಬೆ.8ರಿಂದ ಸಂಜೆ 7ರವರೆಗೆ ನಡೆಯಲಿದ್ದು, ಜನರು ತಪ್ಪದೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ಅವರು ಮಾತನಾಡಿ ಮೆಗಾ ಮೇಳವನ್ನು ಹಮ್ಮಿಕೊಂಡಿದ್ದು, ಕೋವಿಡ್-19 ಸೋಂಕಿನ ವಿರುದ್ದ ಹೋರಾಡಲು ಒಳ್ಳೆಯ ಆಯುಧವಾಗಿದೆ, ಲಸಿಕೆ ಪಡೆಯಲು ಇದು ಒಳ್ಳೆಯ ಅವಕಾಶವಾಗಿದ್ದು, ಬಾಕಿ ಇರುವ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರು ಕಡ್ಡಾಯವಾಗಿ ಲಸಿಕೆಯನ್ನು ಪಡೆಯುವಂತೆ ವಿನಂತಿಸಿದರು.
ನಗರಸಭೆ ಅಧ್ಯಕ್ಷರಾದ ಮೋಹನ್ ಕುಮಾರ್ ಅವರು ಮಾತನಾಡಿ ಲಸಿಕೆಯನ್ನು ಪಡೆದು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ನಗರ ಸಭೆಯ ಆಯುಕ್ತರಾದ ಕೃಷ್ಣಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ||ವಿಜಯ್, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.