ಗಣೇಶ ಚತುರ್ಥಿ ಆಚರಣೆಗೆ ಹಾಸನದಲ್ಲಿ ಈ ಮಾರ್ಗಸೂಚಿಗಳು ಕಡ್ಡಾಯ

0

ಹಾಸನ ಸೆ.07 (ಕರ್ನಾಟಕ ವಾರ್ತೆ):- ಕರೋನಾ ವೈರಸ್ ಸೋಂಕು ಹರಡುವುದನ್ನು  ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ, ಗಣೇಶ ಚತುರ್ಥಿ ಹಬ್ಬದ ಆಚರಣೆಯ ಸಂಬಂಧ ಸರ್ಕಾರದಿಂದ ಹೊರಡಿಸಿರುವ ಆದೇಶದನ್ವಯ ಈ ಕೆಳಕಂಡಂತೆ ನಿಬಂಧನೆಗಳಿಗೊಳಪಡುವಂತೆ ಸರ್ಕಾರದ ಮಾರ್ಗಸೂಚಿಯನ್ನು ಜಾರಿಗೊಳಿಸಲು ಆದೇಶಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಮತ್ತು ವಿಪತ್ತು ನಿರ್ವಹಣ  ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಗಿರೀಶ್ ಅವರು ತಿಳಿಸಿದ್ದಾರೆ.

ಗಣೇಶ ಚತುರ್ಥಿ  ಹಬ್ಬದ ಆಚರಣೆಯ ಸಂಬಂಧ ಹಾಸನ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಮಾರ್ಗಸೂಚಿಗಳು. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ / ಸರ್ಕಾರಿ /ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.

ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು. ಗಣೇಶಮೂರ್ತಿಯನ್ನು 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು / ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ / ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ನಗರ ಪ್ರದೇಶಗಳಲ್ಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು  ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶಾಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ.

ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು ಒಮ್ಮೆಲೆ ಇಪ್ಪತ್ತಕ್ಕಿಂತ ಹೆಚ್ಚು ಜನ ಸೇರಿದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

ಶ್ರೀ ಗಣೇಶ ಆಚರಣೆಯ ಆಯೋಜಕರು ಕೋವಿಡ್-19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.

ಶ್ರೀ ಗಣೇಶ ಆಚರಣೆಯನ್ನು ಆಯೋಜಿಸುವ ಸ್ಥಳದಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು.

ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ / ಸಂಗೀತ / ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಮೂಲಕ ಹಾಗೂ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ / ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆಯನ್ನು ಹೊರಡಿಸ ತಕ್ಕದ್ದಲ್ಲ / ಮಾಡತಕ್ಕದ್ದಲ್ಲ ಇದನ್ನು  ಸಂಪೂರ್ಣವಾಗಿ ನಿರ್ಬಂಧಿಸಿದೆ.

ಪಾರಂಪರಿಕ ಗಣೇಶಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು ಅವುಗಳನ್ನು ಮನೆಯಲ್ಲಿ ವಿಸರ್ಜಿಸುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶಮೂರ್ತಿಯನ್ನು ಅತಿ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ /ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ / ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ  ಈಗಾಗಲೇ ನಿರ್ಮಿಸಲಾದ ಹೊಂಡಾ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ  ವಿಸರ್ಜಿಸುವುದು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು.

ದರ್ಶನಕಾಗಿ ಬರುವ ಭಕ್ತಾದಿಗಳಿಗೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸತಕ್ಕದ್ದು, ಅಲ್ಲದೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಗ್ರಾಮಪಂಚಾಯತ್, ಇತರ ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಅಥವಾ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ ಅಥವಾ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಿಕೊಳ್ಳುವುದು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಅಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here