ಹಾಸನ: ಜುಲೈ 5ರ ಬಳಿಕ ವಿಧಾನಸಭೆ ಅಧಿವೇಶನ ಕರೆಯದಿದ್ದರೆ ವಿಧಾನಸೌಧ ಎದುರು ಜೆಡಿಎಸ್ ಶಾಸಕರ ಜತೆಗೂಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದರು.
ಕೋವಿಡ್ ಎರಡನೇ ಅಲೆ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಹಾಗಾಗಿ ಈ ಬಾರಿ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಕೋವಿಡ್ ಎರಡನೇ ಅಲೆಯಲ್ಲಿ ಮಾಡಿರುವ ವೆಚ್ಚ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕು ಎಂದು ವಿಧಾಸಭೆ ಸ್ಪೀಕರ್ ಮತ್ತು ಮುಖ್ಯಮಂತ್ರಿ ಅವರನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಮಾತನಾಡಿದ ಶಾಸಕನ ಕ್ಷೇತ್ರಕ್ಕೆ ₹250 ಕೋಟಿ ಅನುದಾನ ನೀಡಲಾಗಿದೆ.
ಆದರೆ ಜೆಡಿಎಸ್ ಶಾಸಕ ಕ್ಷೇತ್ರಗಳಿಗೆ ಅನುದಾನ ನೀಡದೇ ದ್ವೇಶದ ರಾಜಕಾರಣ ಮಾಡಲಾಗುತ್ತಿದೆ. ರಾಜ್ಯದ ಹಣಕಾಸು ಸ್ಥಿತಿ ಕುರಿತು ಕೂಡಲೇ ಶ್ವೇತ ಪತ್ರ ಹೊರಡಿಸಬೇಕು. ಸಾರ್ವಜನಿಕರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡುವಂತಿಲ್ಲ ಎಂದರು.
ಅರಸೀಕೆರೆ ನಗರಸಭೆಯ ಜೆಡಿಎಸ್‌ನ ಆರು ಮಂದಿ ಸದಸ್ಯರಿಗೆ ₹25 ಲಕ್ಷ ಆಮಿಷ ಒಡ್ಡಲಾಗಿದೆ ಎಂದು ಜನರು ಹೇಳುತ್ತಿದ್ದಾರೆ. ನಗರಸಭೆ ಮಟ್ಟದಲ್ಲಿ ಆಪರೇಷನ್ ಕಮಲ ಮಾಡಲು ಮುಂದಾಗಿರುವ ರಾಷ್ಟ್ರೀಯ ಪಕ್ಷಕ್ಕೆ ನಾಚಿಕೆ ಆಗಬೇಕು. ಕುಮಾರಸ್ವಾಮಿ ಸರ್ಕಾರ ಬೀಳಿಸಲು ಪ್ರಮುಖ ಪಾತ್ರ ವಹಿಸಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯನ್ನು ಬಿಟ್ಟು ಈ ರೀತಿ ಕೆಲಸ ಮಾಡಿಸಲಾಗುತ್ತಿದೆ ಎಂದು ಪರೋಕ್ಷವಾಗಿ ಎನ್.ಆರ್.ಸಂತೋಷ್ ವಿರುದ್ಧ ಹರಿಹಾಯ್ದರು. ಮುಂದೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.