ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವಂತೆ: ಸೂಚನೆ

0

ಹಾಸನ ಜಿಲ್ಲೆಯಲ್ಲಿ ೪೫ ವರ್ಷ ಮೇಲ್ಪಟ್ಟವರು ಹಾಗೂ ೧೮ ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವಂತೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-೧೯ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಎಲ್ಲಾ ತಾಲ್ಲೂಕುಗಳ ಕೋವಿಡ್ ಅಂಕಿ ಅಂಶಗಳನ್ನು ನಿಖರವಾಗಿ ದಾಖಲಿಸಿ ಎಂದು ನಿರ್ದೇಶನ ನೀಡಿದರು. ಅರಸೀಕೆರೆ ಹಾಗೂ ಅರಕಲಗೂಡು ತಾಲ್ಲೂಕುಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೆಚ್ಚಿದ್ದು ಇನ್ನಷ್ಟು ನಿಗಾವಹಿsಸುವಂತೆ ಸೂಚಿಸಿ, ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಅಧಿಕಗೊಳಿಸಿ ಎಂದು ಸೂಚನೆ ನೀಡಿದರು. ಪಾಸಿಟಿವ್ ಬಂದವರ ಮನೆಗಳ ಬಳಿ ಪೋಸ್ಟರ್ ಅಳವಡಿಸುವ ಮುಖಾಂತರ ಕಂಟೈನ್‌ಮೆಂಟ್ ಜೋನ್ ಎಂದು ಗುರುತಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದರಲ್ಲದೆ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಹರಡುವಿಕೆಯ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಎಂದರು.

ಲಾಕ್‌ಡೌನ್ ಸಡಿಲಿಕೆ ನಂತರ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ರಸ್ತೆ ಹಾಗೂ ಅಂಗಡಿಗಳ ಬಳಿ ಓಡಾಡುತ್ತಿರುವುದು ಕಂಡುಬಂದು ಅಂತವರ ವಿರುದ್ದ ಕ್ರಮ ಜರುಗಿಸುವಂತೆ ಸೂಚನೆ ನೀಡಿದಲ್ಲದೆ ಇದಕ್ಕೆ ಪೊಲೀಸ್ ಇಲಾಖೆಯ ನೆರವು ಪಡೆಯುವಂತೆ ಅವರು ಹೇಳಿದರು.

೫೦೦೦ ಮುಂಗಡ ಹಣವನ್ನು ಇರಿಸಿಕೊಂಡು ಅವಶ್ಯವಿರುವ ಸಾರ್ವಜನಿಕರಿಗೆ ಆಕ್ಸಿಜನ್ ಕಾನ್ಸ್ಂಟ್ರೇಟರ್‌ಗಳನ್ನು ನೀಡುವ ಕುರಿತು ಪರಿಶೀಲನೆ ನಡೆಸಿ ಎಂದರಲ್ಲದೆ ಆಸ್ಪತ್ರೆಗಳಲ್ಲಿ ಯಾವುದೇ ರಿತಿಯ ಔಷಧಿಗಳ ಕೊರತೆಯಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಕರೆತಂದು ಸೂಕ್ತ ಚಿಕಿತ್ಸೆ ನೀಡಿ ಎಂದರಲ್ಲದೆ ಅಗತ್ಯವಿದ್ದರೆ ಪೊಲೀಸ್ ಇಲಾಖೆಯ ನೆರವನ್ನು ನೀಡಲಾಗುವುದು ಎಂದರು. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಶೀಘ್ರವಾಗಿ ಲಸಿಕೆ ನೀಡುವಂತೆ ಅವರು ಸೂಚನೆ ನಿಡಿದರು.

ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಹೆಚ್.ಡಿ. ರೇವಣ್ಣ ಅವರು ವಿಡಿಯೋ ಸಂವಾದದಲ್ಲಿ ಮಾತನಾಡಿ ತಾಲ್ಲೂಕಿನಲ್ಲಿ ಮಕ್ಕಳ ಹಾಗೂ ಹೆರಿಗೆ ಆಸ್ಪತ್ರೆ ನಿರ್ಮಿಸಿದ್ದು ಅಲ್ಲಿಗೆ ಮಕ್ಕಳ ತಜ್ಞ ವೈದ್ಯರನ್ನು ನೇಮಕ ಮಾಡಿಕೊಡಿ ಎಂದರಲ್ಲದೆ ಹೇಮಾವತಿ ಜಲಾಶಯದಿಂದ ಜುಲೈ ಅಂತ್ಯದೊಳಗೆ ರೈತರಿಗೆ ಅನೂಕುಲವಾಗುವಂತೆ ನಾಲೆಗಳಲ್ಲಿ ನೀರು ಹರಿಸಲು ತೀರ್ಮಾನ ಕೈಗೊಳ್ಳಲು ಆಯೋಜಿಸುವಂತೆ ಮನವಿ ಮಾಡಿದರು.

ಈ ಬಗ್ಗೆ ಶೀಘ್ರದಲ್ಲಿ ಕ್ರಮವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರು ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ ಪರಮೇಶ್, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಂಟಿ ಕೃಷಿ ನಿರ್ದೇಶಕರಾದ ರವಿ, ತೋಟಗಾರಿಕ ಇಲಾಖೆ ಉಪನಿರ್ದೇಶಕರಾದ ಯೋಗೇಶ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here